
ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಹೊಸದಾಗಿ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸೌಜನ್ಯಾ ಪ್ರಕರಣದ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ ಮರು ತನಿಖೆಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯ ಮಾಡಿದ್ದರು. ಹೀಗಾಗಿ ಬೆಂಗಳೂರಿನ ಶೇಷಾದ್ರಿಪುರದ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ.ನವೀನ್ ಕುಮಾರ್ ಮತ್ತು ಬಲ್ವಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ಅರ್ಜಿದಾರರು ಎತ್ತಿರುವ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.
ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿ, 2012ರಲ್ಲಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿದೆ. ಈ ಪ್ರಕರಣದ ಆರೋಪಿ ವಿರುದ್ಧ ಸೂಕ್ತ ಸಾಕ್ಷ್ಯಧಾರಗಳು ಇಲ್ಲ ಎಂಬ ಕಾರಣಕ್ಕೆ ಆತನನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿದೆ. ಆದರೆ, ಘಟನೆ ನಡೆದಿರುವುದು ನಿಜವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಅಂದರೆ ನಿಜವಾದ ದೋಷಿ ಪ್ರಕರಣದಿಂದ ತಪ್ಪಿಸಿಕೊಂಡಿದ್ದಾರೆ. ಪ್ರಕರಣ ನಡೆದ ನಂತರದ ಗೋಲ್ಡನ್ ಅವಧಿಯಲ್ಲಿ ತನಿಖಾಧಿಕಾರಿ ಮತ್ತು ವೈದ್ಯರಿಂದ ಕೆಲವೊಂದು ಲೋಪಗಳು ನಡೆದಿವೆ. ಇದರಿಂದ ಮರು ತನಿಖೆ ನಡೆಸಬೇಕೆಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಹಾಗಾಗಿ, ಸಿಬಿಐ, ಇಲ್ಲವೇ ಸ್ವತಂತ್ರ ತನಿಖಾ ಸಂಸ್ಥೆ ಅಥವಾ ಎಸ್ಐಟಿಯಿಂದ ಹೊಸದಾಗಿ ಅಥವಾ ಮರು ತನಿಖೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪ ಪರಿಗಣಿಸಬಹುದಾಗಿದೆ ಮತ್ತು ಈ ಅರ್ಜಿಯಲ್ಲಿ ಮಾಡಿರುವ ಮನವಿಗಳನ್ನು ವ್ಯವಹರಿಸಬಹುದಾಗಿದೆ ಎಂದು ತಿಳಿಸಿತು.
ಕಾನೂನಿನ ಮಿತಿಯಲ್ಲಿ ವ್ಯವಹರಿಸಬೇಕು: ಸಂತ್ರಸ್ತ ಕುಟುಂಬವು ಮೇಲ್ಮನವಿ ಸಲ್ಲಿಸಿಲ್ಲ ಎಂದು ವಕೀಲ ಅರುಣ್ ಶ್ಯಾಮ್ ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹಾಗಾದರೆ ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ಕುಟುಂಬಕ್ಕೆ ನೀವು ಸಹಾಯ ಮಾಡಿ ಎಂಬುದಾಗಿ ಸಲಹೆ ನೀಡಿತು. ಸಭೆ-ಸಮಾರಂಭ, ಧರಣಿ ಹಾಗೂ ಸಾರ್ವಜನಿಕರ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದಿದ್ದರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಾನೂನಿನ ಮಿತಿ ವ್ಯವಹರಿಸಬೇಕಾಗುತ್ತದೆ. ಅದರಂತೆ ಅರ್ಜಿ ಹಿಂಪಡೆದು ನಿಮ್ಮ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿತು. ಅರ್ಜಿ ಹಿಂಪಡೆಯಲು ನಿರಾಕರಿಸಿದ ಅರ್ಜಿದಾರ ಪರ ವಕೀಲರು, ಅರ್ಜಿ ಸಂಬಂಧ ಮೆರಿಟ್ ಮೇಲೆ ನ್ಯಾಯಾಲಯವು ಆದೇಶ ಮಾಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಲಾಗಿದೆ. ಆ ಕುರಿತು ವಿವರವಾದ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿತು.