ಕರ್ನಾಟಕದ ಹವಾಮಾನ; ಸೆಪ್ಟೆಂಬರ್ 18ರ ತನಕ ಮಳೆ

By: Ommnews

Date:

Share post:

ಬೆಂಗಳೂರು, ಸೆಪ್ಟೆಂಬರ್ 12; ಕರ್ನಾಟಕಕ್ಕೆ ನೈಋತ್ಯ ಮುಂಗಾರು ಮಳೆ ಕೈ ಕೊಟ್ಟಿದೆ. ಆದ್ದರಿಂದ ಈಗ ಮಳೆ ಸುರಿದರೂ ಬೇಡವೆಂದು ಹೇಳುವ ಪರಿಸ್ಥಿತಿಯಲ್ಲಿ ಯಾರೂ ಸಹ ಇಲ್ಲ. ಜೂನ್, ಜುಲೈ ತಿಂಗಳಿನಲ್ಲಿ ಬಿತ್ತನೆ ಮಾಡಿದ್ದ ರೈತರು ಈಗ ಬೆಳೆ ಒಣಗುವುದನ್ನು ನೋಡಿ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ.

Advertisement
Advertisement
Advertisement

ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಸೆಪ್ಟೆಂಬರ್ 18ರ ತನಕ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ, ಬರ, ಜಿಲ್ಲೆಯಲ್ಲಿನ ಕೃಷಿ ಚಟುವಟಿಕೆಗಳು, ಕುಡಿಯುವ ನೀರಿನ ಪೂರೈಕೆ, ರೈತರ ಬೆಳೆಗಳಿಗೆ ನೀರು ಒದಗಿಸುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮಧ್ಯಾಹ್ನ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ಸಭೆಯನ್ನು ನಡೆಸುತ್ತಿದ್ದಾರೆ.

ಸೆಪ್ಟೆಂಬರ್ 18ರ ತನಕ ಮಳೆ; ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರ ತನಕ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಸಹ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ಸಂಜೆ ಸಾಧಾರಣ ಮಳೆಯಾಗುತ್ತಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಉಷ್ಣಾಂಶದಲ್ಲಿಯೂ ಇಳಿಕೆಯಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ವಿಜಯನಗರ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ.

ಕರ್ನಾಟಕದಲ್ಲಿ ಜೂನ್ ಮತ್ತು ಆಗಸ್ಟ್‌ನಲ್ಲಿ ಮಳೆ ಕೊರತೆಯಾಗಿದೆ. ಆದರೆ ಜುಲೈ ತಿಂಗಳ ಮೊದಲ 15 ದಿನ ಸುರಿದ ಮಳೆ ಡ್ಯಾಂಗಳಿಗೆ, ಕೃಷಿ ಚಟುವಟಿಕೆಗಳಿಗೆ ಆಧಾರವಾಗಿದೆ. ಆಗಸ್ಟ್ ತಿಂಗಳಿನಲ್ಲಿ ವಾಡಿಕೆಯ ಪ್ರಕಾರ 211 ಮಿ. ಮೀ. ಮಳೆಯಾಗಬೇಕಿತ್ತು. ಆದರೆ ಸುರಿದ ಮಳೆ ಕೇವಲ 58 ಮಿ. ಮೀ. ಆಗಿದೆ.

ಆಗಸ್ಟ್‌ನಲ್ಲಿ ತಾಪಮಾನ ಸಹ ರಾಜ್ಯದಲ್ಲಿ ಏರಿಕೆಯಾಗಿತ್ತು. ಇದು ಮಳೆಗಾಲವೋ, ಬೇಸಿಗೆಯೋ ಎಂಬ ಮಟ್ಟಿಗೆ ತಾಪಮಾನ ರಾಜ್ಯದಲ್ಲಿ ದಾಖಲೆ ಬರೆದಿತ್ತು. ಆದರೆ ಸೆಪ್ಟೆಂಬರ್ ತಿಂಗಳ ಮೊದಲ ವಾರದಿಂದಲೇ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಕಾವೇರಿ ಕೊಳ್ಳದ ಜಲಾಶಯಗಳು ಸೇರಿದಂತೆ ರಾಜ್ಯದ ಯಾವುದೇ ಜಲಾಶಯ ಭರ್ತಿಯಾಗಿಲ್ಲ. ಇದರಿಂದಾಗಿ ಬೇಸಿಗೆಯಲ್ಲಿ ಬೆಳೆಗೆ, ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವುದು ಖಚಿತವಾಗಿದೆ. ಮತ್ತೊಂದು ಕಡೆ ವಿದ್ಯುತ್ ಉತ್ಪಾದನೆ ಮೇಲೆ ಸಹ ಇದು ಪರಿಣಾಮ ಬೀರಲಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section