ಕಾವೇರಿ ನೀರು ಸಂಕಷ್ಟ: ದೆಹಲಿ ಸಭೆಯಲ್ಲಿ ಮಹತ್ವದ ತೀರ್ಮಾನ

0
82

ನವದೆಹಲಿ, (ಸೆಪ್ಟೆಂಬರ್ 20): ಕಾವೇರಿ ನೀರು ಸಂಕಷ್ಟ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್ ನಲ್ಲಿ ಇಂದು(ಸೆ.20) ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜತೆ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಅಭಾವ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಅಲ್ಲದೇ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ಇನ್ನು ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದು, ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜಕೀಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಎಲ್ಲರೂ ಒಮ್ಮತದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಹೇಳಿದ್ದಿಷ್ಟು

ಇನ್ನು ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಭೆಯಲ್ಲಿ ರಾಜ್ಯದ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಅನ್ಯ ಕೆಲಸದ ಹಿನ್ನೆಲೆ ವಿತ್ತ ಸಚಿವೆ ನಿರ್ಮಲಾ ಸಭೆಗೆ ಬಂದಿರಲಿಲ್ಲ. ರಾಜ್ಯದಲ್ಲಿ ಮಳೆ ಕೊರತೆಯಿಂದ ಡ್ಯಾಮ್​ಗಳಲ್ಲಿ ನೀರು ಇಲ್ಲ. 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ. ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಸೂತ್ರ ಏನು ಎನ್ದುನುವು ತಯಾರಿಯಾಗಿಲ್ಲ. ಇದು ದುರದುಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ. ನಮಗೆ ಈಗ ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕದ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ. ಈ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ ಎಂದರು.

LEAVE A REPLY

Please enter your comment!
Please enter your name here