ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭ ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಭಾಗವಹಿಸಿದ್ದರು.
ಸ್ಟೇಡಿಯಂಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 121 ಕೋಟಿ ರೂ. ಹಣವನ್ನು ಖರ್ಚು ಮಾಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅದರ ನಿರ್ಮಾಣಕ್ಕೆ 330 ಕೋಟಿ ರೂ. ವೆಚ್ಚ ಮಾಡಲಿದೆ. ರಜತಲಾಬ್ ಪ್ರದೇಶದ ರಿಂಗ್ ರೋಡ್ ಬಳಿ ನಿರ್ಮಾಣವಾಗಲಿರುವ ಕ್ರೀಡಾಂಗಣವು ಡಿಸೆಂಬರ್ 2025ರ ವೇಳೆಗೆ ಸಿದ್ಧವಾಗುವ ಸಾಧ್ಯತೆಯಿದೆ.
ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಯು ವಾರಣಾಸಿಯ ಘಾಟ್‌ಗಳ ಮೆಟ್ಟಿಲುಗಳನ್ನು ಹೋಲುತ್ತದೆ. ಕಾನ್ಪುರ ಮತ್ತು ಲಕ್ನೋ ನಂತರ ಉತ್ತರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇದಾಗಿದೆ.