ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಅಕ್ಟೋಬರ್ 15ರ ವರೆಗೆ ನಿತ್ಯ 3,000 ಕ್ಯೂಸೆಕ್ ನೀರನ್ನ ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡ್ತೇವೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಬಹುದಾ? ಅಂತ ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸಭೆಯನ್ನೂ ಕರೆದಿದ್ದೇನೆ. ಅವರೊಂದಿಗೂ ಮಾತನಾಡಿ ಮುಂದೇನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.