ಮಣಿಪುರದಲ್ಲಿ ಮತ್ತೆ ಸಂಘರ್ಷ – ಮನೆಗಳಿಗೆ ಹೊತ್ತಿದ ಬೆಂಕಿ

0
93

ಇಂಫಾಲ, ಅ. 5: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಬಳಿಕ ಪ್ರದೇಶದಲ್ಲಿ ಜಮಾಯಿಸಿದ ಮೈತೆಯಿ ಮಹಿಳೆಯರ ಗುಂಪನ್ನು ಭದ್ರತಾ ಪಡೆಗಳು ಮುಂದೆ ಸಾಗದಂತೆ ತಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ.

LEAVE A REPLY

Please enter your comment!
Please enter your name here