ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿತು.
ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.
ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು. ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯನ್ನು ಸೌರವಿದ್ಯುತ್ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಚರ್ಚಿಸಲಾಯಿತು.