ಬೆಂಗಳೂರು ಕಂಬಳ:ಕರಾವಳಿ ಮೂಲದ ಸಿನಿಮಾತಾರೆಯರು ಭಾಗಿಯಾಗಲಿರುವರು ಎಂದು ಮಾಹಿತಿ ನೀಡಿದ ಉಮೇಶ್ ಶೆಟ್ಟಿ

0
100

ಬೆಂಗಳೂರು: ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಹೇಳಿದರು.

ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.

ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.

ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್‌ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here