ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿಯನ್ನಾಗಿ ಡಾ. ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.
ನೂತನವಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಸೋಮವಾರ ಸಭೆ ನಡೆಸಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದರು.
ನವೆಂಬರ್ 17 ರಂದು ನಡೆದ ಚುನಾವಣೆಯಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿತ್ತು. ಕಾಂಗ್ರೆಸ್ 66 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಚುನಾವಣೆಗೂ ಮುನ್ನ ಬಿಜೆಪಿ ಯಾರನ್ನೂ ಮುಖ್ಯಮಂತ್ರಿಯ ಅಭ್ಯರ್ಥಿಯನ್ನಾಗಿ ಬಿಂಬಿಸಿರಲಿಲ್ಲ. ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಿದ್ದರೂ ಇಡೀ ಚುನಾವಣೆಯ ಪ್ರಚಾರವು ಪ್ರಧಾನಿ ಮೋದಿಯವರ ನಾಯಕತ್ವದ ಮೇಲೆ ಆಧಾರಿತವಾಗಿತ್ತು.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಕೋರ್ ಗ್ರೂಪ್ ಸಭೆ ನಡೆಸಲಾಯಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಹೆಸರನ್ನು ಅಂಗೀಕರಿಸಲಾಯಿತು.