ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಐವರು ಲಷ್ಕರ್ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.
ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಇಂದು (ಗುರುವಾರ) ಎನ್‌ಕೌಂಟರ್ ನಡೆದಿದೆ. ಆರಂಭದಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ನಂತರದ ಗುಂಡಿನ ಕಾಳಗದಲ್ಲಿ ಇನ್ನೂ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾಗೆ ಸೇರಿದವರು. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.